ಬೆಂಗಳೂರಿನಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಬಿಬಿಎಂಪಿಯು (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಮಹತ್ವದ ಹಾಗೂ ಸ್ಮಾರ್ಟ್ ಮಾರ್ಗವೊಂದನ್ನು ಕಂಡುಕೊಂಡಿದೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ರಸ್ತೆಗುಂಡಿ, ಕಸ ಹಾಗೂ ಸ್ವಚ್ಛತೆ ಸೇರಿದಂತೆ ಹಲವು ವಿಷಯದಲ್ಲಿ ಸಮಸ್ಯೆ ಎದುರಾಗಿದೆ. ಇದೀಗ ಬಿಬಿಎಂಪಿಯು ಬೆಂಗಳೂರಿನಲ್ಲಿ ಜನರ ಸಮಸ್ಯೆಗಳನ್ನು ವಾರ್ಡ್‌ವಾರು ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಬೆಂಗಳೂರಲ್ಲಿ ಪಾಲಿಕೆಯ ಚುನಾವಣೆ ನಡೆದು 5 ವರ್ಷ ಸಮೀಪಿಸುತ್ತಿದೆ. ಪಾಲಿಕೆಯಲ್ಲಿ ಅಧಿಕಾರಿಗಳೇ ಆಡಳಿತ ನಡೆಸುತ್ತಿದ್ದಾರೆ. ಇದರಿಂದ ಜನರ ಸಮಸ್ಯೆಗಳು ಸಕಾಲದಲ್ಲಿ ಪರಿಹಾರವಾಗುತ್ತಿಲ್ಲ ಎನ್ನುವ ಆರೋಪ ಇದೆ.
ಇದೀಗ ಬೆಂಗಳೂರಿನಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿ ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳ ನಿಯೋಜನೆ ಮಾಡುವಂತೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶ ಹೊರಡಿಸಿದ್ದಾರೆ. ಬಿಬಿಎಂಪಿಯ ಎಲ್ಲಾ ವಾರ್ಡ್‌ಗಳಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಬಗೆಹರಿಸುವ ಉದ್ದೇಶದಿಂದ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸುತ್ತೋಲೆ ಹೊರಡಿಸಿದ್ದಾರೆ.
ಡಿ.ಕೆ ಶಿವಕುಮಾರ್ ಆರ್ಡರ್‌ನಿಂದ ಬದಲಾವಣೆ
ಬೆಂಗಳೂರಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಹಾಗೂ ಬೆಂಗಳೂರಿನಲ್ಲಿ ವಾರ್ಡ್‌ವಾರು ಯಾವುದೇ ಸಮಸ್ಯೆಗಳು ಎದುರಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರ ಡಿ.ಕೆ ಶಿವಕುಮಾರ್ ಅವರು ಆರ್ಡರ್ ಮಾಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರು ಈ ಕ್ರಮ ತೆಗೆದುಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಎಲ್ಲಾ ವಲಯಗಳಲ್ಲಿಯೂ ಪ್ರತಿ ವಾರ್ಡ್‌ಗೆ ಒಬ್ಬ ಅಧಿಕಾರಿಯನ್ನು ಮೇಲುಸ್ತುವಾರಿ ಮಾಡುವ ಉದ್ದೇಶದಿಂದ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿರುವುದಾಗಿ ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಬಿಬಿಎಂಪಿಯಿಂದ ಈಗ ನೇಮಕ ಮಾಡಲಾಗಿರುವ ಅಧಿಕಾರಿಗಳು ಅವರಿಗೆ ನಿಯೋಜಿಸಿರುವ ವಾರ್ಡ್‌ಗಳಲ್ಲಿ ಕಡ್ಡಾಯವಾಗಿ ಪ್ರತಿ ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಕಚೇರಿಯ ಅವಧಿಯಲ್ಲಿ ಹಾಜರಿರಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೇ ಸಾರ್ವಜನಿಕರೊಂದಿಗೆ ಸಭೆಗಳನ್ನು ನಡೆಸಬೇಕು. ಸಾರ್ವಜನಿಕರ ದೂರು ಹಾಗೂ ಸಮಸ್ಯೆಗಳನ್ನು ಕೇಳಬೇಕು. ಅಲ್ಲದೇ ಇನ್ನುಳಿದ ವಾರ್ಡ್ ಮಟ್ಟದ ಅಧಿಕಾರಿಗಳೊಂದಿಗೆ ಸೇರಿ ಆ ವಾರ್ಡ್‌ನಲ್ಲಿ ಯಾವುದೇ ಸಮಸ್ಯೆ ಇದ್ದರೂ ಪರಿಹರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಎಲ್ಲಾ ವಾರ್ಡ್‌ಗಳಲ್ಲಿಯೂ ಪ್ರತಿ ಬುಧವಾರ ನಡೆಯುವ ಸಾರ್ವಜನಿಕ ಸಭೆ ನಡೆಸುವ ಬಗ್ಗೆ ಆಯಾ ವಾರ್ಡ್‌ನ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಬೇಕು. ಅಲ್ಲದೇ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಇದ್ದರೆ, ಆಯಾ ಇಲಾಖೆಯ ಸಂಬಂಧಪಟ್ಟ ಅಧಿಕಾರಗಳೊಂದಿಗೆ ಸಮನ್ವಯ ಸಾಧಿಸಿ, ಸಮಸ್ಯೆಯನ್ನು ವಾರ್ಡ್ ಹಂತದಲ್ಲಿಯೇ ಪರಿಹರಿಸಲು ನೋಡಲ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.ವಾರ್ಡ್ ಮಟ್ಟದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ವಲಯ ಮಟ್ಟದಲ್ಲಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ನೋಡಲ್ ಅಧಿಕಾರಿಗಳು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಬೇಕು
ಇನ್ನು ಪಾಲಿಕೆಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್‌ಗಳಲ್ಲಿ ಪ್ರತಿ ಬುಧವಾರ ಸಭೆ ನಡೆಯಲಿದೆ. ಈ ಸಂಬಂಧ ವಲಯ ಆಯುಕ್ತರು ವೇಳಾಪಟ್ಟಿ ಸಿದ್ಧಪಡಿಸಿಕೊಂಡು, ಪ್ರತಿ ಬುಧವಾರದಂದು ತಮ್ಮ ವಲಯದ ವಾರ್ಡ್‌ಗಳಿಗೆ ಭೇಟಿ ನೀಡಿ ವಾರ್ಡ್ ಮಟ್ಟದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ವಬ್‌ಸೈಟ್‌ನಲ್ಲಿ ನೋಡಲ್ ಅಧಿಕಾರಿಗಳ ವಿವರ
ಪಾಲಿಕೆಯ 8 ವಲಯಗಳ ವ್ಯಾಪ್ತಿಯ ವಾರ್ಡ್‌ಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ವಾರ್ಡ್ ವಾರು ಯಾವ ನೋಡಲ್ ಅಧಿಕಾರಿಗಳು ಇದ್ದಾರೆ. ಅವರ ಹೆಸರು, ವಾರ್ಡ್ ಹೆಸರು, ಹುದ್ದೆ ಹಾಗೂ ದೂರವಾಣಿ ಸಂಖ್ಯೆಯ ವಿವರವಾದ ಪಟ್ಟಿಯನ್ನು ಸಹ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತನ್ನ ಅಧಿಕೃತ ವೆಬ್‌ಸೈಟ್ bbmp.gov.in/home ನಲ್ಲಿ ಅಪ್ಲೋಡ್ ಮಾಡಿದೆ.